ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಂದುತ್ವ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ, ಇದ್ರೀಸ್ ಪಾಷಾ ಕೊಲೆ ಆರೋಪಿ, ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡರಾತ್ರಿಯೇ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ ಪದೇ- ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ' ಎಂದು ಸಿಸಿಬಿ ಮೂಲಗಳು ಹೇಳಿವೆ.
ಜೂನ್ 28ರಂದು ಸಹಾಯಕ ಪೊಲೀಸ್ ಆಯುಕ್ತರು ಪುನೀತ್ ಕೆರೆಹಳ್ಳಿಗೆ ಜಾರಿ ಮಾಡಿದ್ದ ನೋಟಿಸ್ ನಲ್ಲಿ, ‘ಹಲವು ಪ್ರಕರಣಗಳ ಆರೋಪಿಯಾಗಿರುವ ನೀವು ಸ್ಪಷ್ಟೀಕರಣ ನೀಡದಿದ್ದಲ್ಲಿ ನಿಮ್ಮ ವಿರುದ್ಧ ರೌಡಿಶೀಟರ್ ಪಟ್ಟಿ ತೆರೆಯುತ್ತೇವೆ’ ಎಂದು ಎಚ್ಚರಿಸಿದ್ದರು. ಈತನ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ, ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ.
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ. ಎಲ್ಲ ಕೃತ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ' ಎಂದು ಮೂಗಳು ತಿಳಿಸಿವೆ.
ಏನಿದು ಗೂಂಡಾ ಕಾಯ್ದೆ?
1985ರಲ್ಲಿ ಆಗಿನ ಜನತಾ ಪಕ್ಷದ ಸರ್ಕಾರ ಗೂಂಡಾ ಚಟುವಟಿಕೆ ನಿಯಂತ್ರಿಸಲು ಈ ಕಾಯ್ದೆಯನ್ನು ಜಾರಿಗೆ ತಂದಿತ್ತು. ಜೂಜುಕೋರರು, ಕಳ್ಳ ಬಟ್ಟಿ ವ್ಯಾಪಾರಿಗಳು, ಮಾದಕ ವಸ್ತು ಸಾಗಾಣಿಕೆ ಮತ್ತು ಮಾರಾಟಗಾರರ ವಿರುದ್ಧ ಈ ಕಾಯ್ದೆಯ ಮೂಲಕ ಕ್ರಮಕೈಗೊಳ್ಳಬಹುದಾಗಿತ್ತು. ಈ ಕಾಯ್ದೆಯಡಿ ಬಂಧಿಸಲಾದ ವ್ಯಕ್ತಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯವಿರುವುದಿಲ್ಲ. ಅಲ್ಲದೇ ಪೊಲೀಸ್ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೆ ನೇರವಾಗಿ ಜೈಲಿಗೆ ಕಳುಹಿಸಬಹುದು. ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿತನಾದಲ್ಲಿ ಅಪರಾಧಿಗೆ ಒಂದು ವರ್ಷ ಜಾಮೀನು ಸಿಗುವುದಿಲ್ಲ.
ಗೂಂಡಾ ತಡೆ ಕಾಯ್ದೆಯನ್ನು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಪೊಲೀಸ್ ಆಯುಕ್ತರಿಗೆ ಮ್ಯಾಜಿಸ್ಟೀರಿಯಲ್ ಅಧಿಕಾರವಿರುತ್ತದೆ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅಥವಾ ಪೊಲೀಸ್ ಆಯುಕ್ತರಿಗೆ ಈ ಅಧಿಕಾರವಿದೆ. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಚಟುವಟಿಕೆಗಳ ಬಗ್ಗೆ ಕೆಳಹಂತದ ಪೊಲೀಸ್ ಅಧಿಕಾರಿಗಳು ನೀಡುವ ವರದಿಯನ್ನು ಪರಿಶೀಲಿಸಿ ಪೊಲೀಸ್ ಆಯುಕ್ತರು ಅಥವಾ ಜಿಲ್ಲಾಧಿಕಾರಿ ಕಾಯ್ದೆಯನ್ನು ಜಾರಿಗೊಳಿಸುತ್ತಾರೆ.
Comentarios